- Advertisment -
HomeGovt SchemesKarnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ.

2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಸದನದಲ್ಲಿ ಮಂಡನೆ ಮಾಡಿದ್ದು ಈ ಕುರಿತು ವಾರ್ತಾ ಇಲಾಖೆಯಿಂದ ಪ್ರಕಟಣೆಯಲ್ಲಿ ತಿಳಿಸಿರುವ ಇಲಾಖಾವಾರು ಯೋಜನೆಗಳ ವಿವರವಾದ ಮಾಹಿತಿ ಈ ಕೆಳಗಿನಂತಿದೆ.

ಇದನ್ನೂ ಓದಿ: Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

ಸನ್ಮಾನ್ಯ ಮುಖ್ಯಮಂತ್ರಿಗಳು ಇಂದು 2025-26 ಸಾಲಿನ ಆಯವ್ಯಯವನ್ನು(Karnataka State Budget) ಸದನದಲ್ಲಿ ಮಂಡಿಸಿದರು. ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ, ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂದು ತಿಳಿಸಿದರು.

ಪತ್ರಕರ್ತ ಮಾಸಾಶ ಹೆಚ್ಚಳ:

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000/- ರೂ. ಮಾಸಾಶನವನ್ನು ರೂ.15.000/-ಗಳಿಗೆ ಹಾಗೂ ಕುಟುಂಬ ಮಾಸಾಶನವನ್ನು ರೂ.6000/- ದಿಂದ ರೂ.7500/- ಗಳಿಗೆ ಹೆಚ್ಚಿಸಲಾಗುವುದು. ಚಿತ್ರೋದ್ಯಮಿಗಳ ಅನುಕೂಲಕ್ಕಾಗಿ ಅಂತರರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು ರೂ.500 ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿ ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಮ್ಮ ಆಯವ್ಯಯ ಭಾಷಣದಲ್ಲಿ ತಿಳಿಸಿದರು.

ಇದನ್ನೂ ಓದಿ: Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

Karnataka Budget Highlights-2025-26: ಇಲಾಖಾವಾರು ಅನುದಾನ ಹಂಚಿಕೆ ವಿವರ ಹೀಗಿದೆ:

1) ಕೃಷಿ/Agriculture:

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ ಈ ಪದ್ದತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.

ಕೃಷಿ ಯಾಂತ್ರೀಕರಣ ಕಾರ್ಯಕ್ರಮದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ ಅನುದಾನವನ್ನು 2025-26 ನೇ ಸಾಲಿನ ಆಯವ್ಯದಲ್ಲಿ ಕಲ್ಪಿಸಲಾಗುವುದು. ರಾಜ್ಯದಲ್ಲಿ 6 ಸಾವಿರ ಕಿರು ಸಂಸ್ಕರಣ ಘಟಕಗಳು ಹಾಗೂ 14 ಸಾಮಾನ್ಯ ಇನ್‍ಕ್ಯೂಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕಿರು ಸಂಸ್ಕರಣ ಘಟಕಗಳನ್ನು ಸ್ಥಾಪಿಸಲಾಗುವುದು.

ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ ಭಿತ್ತನೆ ಬೀಜ ಸಸ್ಯ ಸಂರಕ್ಷಣೆ ಔಷಧಿ, ಜೈವಿಕ ಗೊಬ್ಬರ, ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.

ಇದನ್ನೂ ಓದಿ: Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Agriculture Loan Scheme

ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಳಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಬೆಳಗವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು, ವಿಜಯಪುರದ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.

2) ತೋಟಗಾರಿಕೆ/Horticulture:

ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕೆ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ ಇತ್ತೀಚಿನ ಬೆಳೆ ಪದ್ದತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಿ ಆಧುನೀಕರಣದ ಅನುಕೂಲಗಳನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿಗೊಳಿಸಲಾಗುವುದು. ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಲಾಗುವುದು. ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.

ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52 ಸಾವಿರ ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣ ಕ್ರಮಗಳಿಗಾಗಿ 62 ಕೋಟಿ ರೂ ಒದಗಿಸಲಾಗಿದೆ.

ಇದನ್ನೂ ಓದಿ: Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

3) ರೇಷ್ಮೆ/Sericulture:

ಮೈಸೂರು ಮತ್ತು ಸುತ್ತುಮುತ್ತಲಿನ ಭಾಗದ ರೇಷ್ಮೆಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಬಾರ್ಡ್ ಸಹಯೋಗದಲ್ಲಿ ಸ್ಥಾಪಿಸಲಾಗುವುದು. ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿಯನ್ನು ರೂ 250 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿü ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ ಅನುದಾನ ಒದಗಿಸಲಾಗುವುದು.

4) ಪಶು ಸಂಗೋಪನೆ/Veterinary:

ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಹಸು ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 10 ಸಾವಿರಗಳಿಂದ 15 ಸಾವಿಗಳಿಗೆ, ಕುರಿ / ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5 ಸಾವಿರಗಳಿಂದ 7,500 ರೂಗಳಿಗೆ ಹಾಗೂ 3 ರಿಂದ 6 ತಿಂಗಳ ಕುರಿ / ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು ರೂ 3,500 ರೂಪಾಯಿಗಳಿಗೆ ಹೆಚ್ಚಿಸಲಾಗುವುದು.

2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಿಸಲಾಗುವುದು. ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ದಿಗಾಗಿ 2 ಕೋಟಿ ರೂ ಒದಗಿಸಲಾಗುವುದು. ನಂದಿನಿ ಬ್ರ್ಯಾಂಡ್‍ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಲಾಗಿದೆ.

5) ಮೀನುಗಾರಿಕೆ/Fisheries:

ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಲು 30 ಕೋಟಿ ರೂ ಒದಗಿಸಲಾಗುವುದು. ಪರಿಶಿಷ್ಟ ಜಾತಿ / ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇಕಡ 50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಗಳ ನೆರವು ನೀಡಲಾಗುವುದು.

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು “ಮಲ್ಟಿ-ಲೆವೆಲ್ ಪಾರ್ಕಿಂಗ್” ವ್ಯವಸ್ಥೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.

ಇದನ್ನೂ ಓದಿ: Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

6) ಜಲಸಂಪನ್ಮೂಲ/Watershed:

ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮಥ್ರ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮಥ್ರ್ಯವನ್ನು ಕಲ್ಪಿಸಲಾಗುವುದು.

ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ದತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗಿದೆ.
ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರೀಶಿಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು.

7) ಸಣ್ಣ ನೀರಾವರಿ/Irrigation:

ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜೀವನ ಇತ್ಯಾದಿ ಯೋಜನೆಗಳಡಿ ಒಟ್ಟಾರೆ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

8) ಶಾಲಾ ಶಿಕ್ಷಣ/Education:

ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ ಹೆಚ್ಚಿಸಲಾಗುವುದು. ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.

ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು. ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಅವಿಷ್ಕಾರ ಯೋಜನೆಯಡಿ 200 ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.

9) ಉನ್ನತ ಶಿಕ್ಷಣ/Higher Education:

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕøಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮಥ್ರ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ.ಮನಮೋಹನ್‍ಸಿಂಗ್ ಬೆಂಗಳೂರು ನಗರ ವಿಶ್ವವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ ವೆಚ್ಚದಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ನೀಡಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 158 ಕೋಟಿ ರೂ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

10) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ/Health:

ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ ಒದಗಿಸಲಾಗಿದೆ.

ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರ ತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು.

ನರ ವೈಜ್ಞಾನಿಕ ಕಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಲ್ಲಿ ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು.

ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ.ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿ ವರ್ಗ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ. ಸಿಬ್ಬಂದಿಯ ವೈಯಕ್ತಿಕ ಮಾಸಿಕ ವಂತಿಕೆ 100 ರೂ. ಮತ್ತು ಸರ್ಕಾರದ ಮಾಸಿಕ ವಂತಿಕೆ 200 ರೂ.ಗಳೊಂದಿಗೆ ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುವುದು. ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವ ಧನವನ್ನು 1000 ರೂ ಹೆಚ್ಚಿಸಲಾಗುವುದು.

11) ವೈದ್ಯಕಿಯ ಶಿಕ್ಷಣ/Medical:

ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕಿಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕಿಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಬೀದರ್ ಸರ್ಕಾರಿ ವೈದ್ಯಕಿಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು. ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೊಕ್ರೈನಾಲಜಿ ಕೇಂದ್ರಗಳನ್ನು ಆರಂಭಿಸಲಾಗುವುದು. ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.

12) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ/Women and Child Development:

ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು. ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.

ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.

ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು. ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ಶಾಲೆಗಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1750 ರೂ ಗಳಿಗೆ ಹೆಚ್ಚಿಸಲಾಗುವುದು. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು.

13) ಸಮಾಜ ಕಲ್ಯಾಣ/Social Welfare Department:

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 29,992 ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,026 ಕೋಟಿ ರೂ.ಗಳೂ ಸೇರಿದಂತೆ ಒಟ್ಟಾರೆ 42,018 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.

ವಸತಿ ಶಾಲೆಗಳಿಲ್ಲದ ಹೋಬಳಿಗಳನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ 26 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅದೇ ಕಾಲೇಜಿನ ವಸತಿ ನಿಲಯಗಳನ್ನು ಪ್ರವೇಶ ಪಡೆದಿದ್ದಲ್ಲಿ ಅವರಿಗೆ ವಸತಿ ನಿಲಯದ ವೆಚ್ಚ 3,500 ರೂ ಪಾವತಿಸಲಾಗಿದೆ.

ಅರಣ್ಯ ಮತ್ತು ಅರಣ್ಯ ಹಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ 12 ಬುಡಗಟ್ಟು ಸಮುದಾಯಗಳ 47,859 ಕುಟುಂಬಗಳಿಗೆ ಪೌಷ್ಠಿಕ ಆಹಾರ ಕಿಟ್ಟು ನೀಡಲಾಗುತ್ತಿದೆ. ರಾಜ್ಯ ಬುಡಕಟ್ಟು ಸಂಸ್ಕøತಿಯನ್ನು ಪರಿಚಯಿಸಲು ಮೈಸೂರು ನಗರದಲ್ಲಿರುವ ಬುಡಕಟ್ಟು ಸಂಶೋಧನಾ ಕೇಂದ್ರದ ಆವರಣದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅರಣ್ಯ ಅಂಚಿನ ಕಾಡಿನಲ್ಲಿ ವಾಸಿಸುವ 13 ಬುಡಗಟ್ಟು ಜನಾಂಗಗಳಾದ ಜೇನು ಕುರುವ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡರು ಇತ್ಯಾದಿ ಜನರು ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿ ಮಾಡಲಾಗುವುದು.

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ಅಗತ್ಯ ಮೂಲ ಸೌಕರ್ಯ ನೀಡಲು 50 ಕೋಟಿ ರೂ. ಒದಗಿಸಲಾಗುವುದು. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ನೀಡಲಾಗಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನವನ್ನು 20 ಲಕ್ಷ ರೂ ಗಳಿಂದ 30 ರೂ ಗಳಿಗೆ ಹೆಚ್ಚಿಸಲಾಗಿದೆ.

ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಳೆದ ಸಾಲಿನ ಆಯವ್ಯಯದಲ್ಲಿ 5200 ಕೋಟಿ ರೂ ವೆಚ್ಚದಲ್ಲಿ ಪ್ರಗತಿಪಥ ರಸ್ತೆ ಅಭಿವೃದ್ಧಿ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸುವುದಾಗಿ ಘೋಷಿಸಲಾಗಿರುತ್ತದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು. ಜಲಜೀವನ್ ಮಿಷನ್ ಯೋಜನೆಗೆ 2025-26ನೇ ಸಾಲಿಗೆ ಸರ್ಕಾರದಿಂದ 6050ಕೋಟಿ ರೂಗಳನ್ನು ಒದಗಿಸಲಾಗಿದೆ.

ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ವಿಪುಲ ಅವಕಾಶ ಮತ್ತು ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳಲು ನೂತನ ಪ್ರವಾಸೋದ್ಯಮ ನೀತಿ 2024-29ನ್ನು ಜಾರಿಗೊಳಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರವನ್ನು ಆಶಾದಾಯಕ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಆದ್ಯತೆಯ ವಲಯವಾಗಿಸುವ ಉದ್ದೇಶ ಹೊಂದಿರುವ ನೀತಿಯಿಂದ ರಾಜ್ಯದಲ್ಲಿ 8000 ಕೋಟಿ ರೂ ಹೂಡಿಕೆಯ ನಿರೀಕ್ಷೆ ಹಾಗೂ 1.5 ಲಕ್ಷ ಉದ್ಯೋಗ ಸೃಜನೆಗೆ ಗುರಿ ಹೊಂದಲಾಗಿದೆ. ರಾಜ್ಯದ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಸೃಷ್ಟಿಸಲು 25 ಸ್ಮಾರಕಗಳನ್ನು ದತ್ತು ನೀಡಲಾಗಿದೆ.

ಒಲಂಪಿಕ್ಸ್, ಕಾಮನ್ ವೆಲ್ತ್ ಹಾಗೂ ಏಷನ್ ಗೇಮ್ಸ್‍ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು.
ಗ್ರಾಮ ಮತ್ತು ತಾಲ್ಲೂಕು ಮಟ್ಟದಲ್ಲಿ ಭೂ ದಾಖಲೆಗಳನ್ನು ತಾಲೆ ಮಾಡಿ ಕ್ರಮ ಬದ್ದಗೊಳಿಸುವ ವಿಧಾನವಾದ ಜಮಾಬಂದಿ ಪ್ರಕ್ರಿಯೆಯನ್ನು ನೇರವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಅಭಿವೃದ್ದಿ ಪಡಿಸಲಾಗುವುದು.

ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ಕಾಮಗಾರಿಯನ್ನು ಅನುಷ್ಠಾನಗೊಲಿಸಲಾಗಿದೆ.
ಕೃತಕ ಬುದ್ದಿ ಮತ್ತು (ಎಐ) ಹಾಗೂ ಭೌಗೋಳಿಕ ಮಾಹಿತಿ ವ್ಯವಸ್ಥೆಯಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಎಲ್ಲಾ ಇಲಾಖೆಗಳಲ್ಲಿ ಸುಧಾರಿತ ಹಾಜರಾತಿ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಮಾಹಿತಿ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂ ಸ್ವಾದಿನ ಕುರಿತಂತೆ ನ್ಯಾಯಾಲಯಗಳಲ್ಲಿ ದಾಖಲಿಸಿರುವ ಪ್ರಕರಣಗಳನ್ನು ವಿಲೇವಾರಿ ಮಾಡಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭೂ ಸ್ವಾದೀನಗಳ ವಿಶೇಷ ತ್ವರಿತಗತಿ ನ್ಯಾಯಲಯವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.

2025-26ನೇ ಸಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆ ಗುರಿಯನ್ನು 1 ಲಕ್ಷ 20 ಸಾವಿರ ಕೋಟಿ ರೂಗಳಿಗೆ ನಿಗಧಿಪಡಿಸಲಾಗಿದೆ. ಹಾಗೆಯೇ ಅಬಕಾರಿ ಇಲಾಖೆಗೆ 40 ಸಾವಿರ ಸಂಗ್ರಹಣ ಗುರಿಯನ್ನು ನೀಡಲಾಗಿದೆ.

ಎಲ್ಲರಿಗೂ ಸಮಪಾಲು ಸಮಬಾಳು ಎಂಬ ದೂರದೃಷ್ಟಿಯಿಂದ ಎಲ್ಲಾ ಇಲಾಖೆಗಳಿಗೆ ಅಗತ್ಯ ಅನುದಾನ ಒದಗಿಸಿ ರಾಜ್ಯದ ಜನತೆಯ ಅಭಿವೃದ್ಧಿಯ ಗುರಿಯನ್ನಿಟ್ಟುಕೊಂಡು ಸನ್ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ವಲಯಗಳಿಗೂ ಅಗತ್ಯತೆಗಳಿಗನುಗುಣವಾಗಿ 2025-26ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದಾರೆ.

- Advertisment -
LATEST ARTICLES

Related Articles

- Advertisment -

Most Popular

- Advertisment -